ಖ್ಯಾತ ಪರಿಸರವಾದಿ ಮಾಧವ್ ಗಾಡ್ಗೀಳ್ ನಿಧನ
ಪುಣೆ: ಖ್ಯಾತ ಪರಿಸರವಾದಿ, ಲೇಖಕ ಹಾಗೂ ಸಂಶೋಧಕ ಡಾ.ಮಾಧವ್ ಗಾಡ್ಗೀಳ್ ಅವರು ಬುಧವಾರ (ಜ.7) ರಾತ್ರಿ 11ಕ್ಕೆ ಪುಣೆಯ ಪ್ರಯಾಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರಿಗೆ 83 ವರ್ಷ ವಯಸ್ಸಾಗಿತ್ತು.
ಗಾಡ್ಗೀಳ್ ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನದವರೆಗೆ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು. ಗುರುವಾರ ಸಂಜೆ 4 ಗಂಟೆಗೆ ಪುಣೆಯ ವೈಕುಂಠ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಪರಿಸರ ವಿಜ್ಞಾನ ಮತ್ತು ಸಂರಕ್ಷಣೆಗೆ ನೀಡಿದ ಕೊಡುಗೆಗಾಗಿ ಗಾಡ್ಗೀಳ್ ಅವರಿಗೆ ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿತ್ತು.
1942ರ ಮೇ 24ರಂದು ಪುಣೆಯಲ್ಲಿ ಜನಿಸಿದ ಗಾಡ್ಗೀಳ್, ಪುಣೆ ವಿಶ್ವವಿದ್ಯಾಲಯ ಮತ್ತು ಮುಂಬೈ ವಿಶ್ವವಿದ್ಯಾಲಯದಲ್ಲಿ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದರು. ಬಳಿಕ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಗಣಿತ ಪರಿಸರ ವಿಜ್ಞಾನದಲ್ಲಿ ಪಿಹೆಚ್‌ಡಿ ಪಡೆದರು.
1973ರಿಂದ 2004ರವರೆಗೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್ಸಿ) ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. ಈ ಅವಧಿಯಲ್ಲಿ, ಅವರು ಪರಿಸರ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಿದರು. ಇದು ಪರಿಸರ ವಿಜ್ಞಾನದಲ್ಲಿ ಭಾರತದ ಪ್ರಮುಖ ಸಂಶೋಧನಾ ಕೇಂದ್ರಗಳಲ್ಲಿ ಒಂದಾಗಿದೆ.
ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಹಾನಿ ಮತ್ತು ಸಂರಕ್ಷಣಾ ಅಗತ್ಯಗಳ ಕುರಿತ ಅಧ್ಯಯನದ ಪರಿಸರ ವಿಜ್ಞಾನ ತಜ್ಞರ ಸಮಿತಿಯ ಮುಖ್ಯಸ್ಥರಾಗಿ ಇವರು ಸೇವೆ ಸಲ್ಲಿಸಿದ್ದರು. ಈ ಅಧ್ಯಯನ ಗಾಡ್ಗೀಳ್ ಆಯೋಗ ಎಂದೇ ಜನಪ್ರಿಯವಾಗಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



