ಧರ್ಮಸ್ಥಳ ಸಾಕ್ಷಿ ದೂರು ಪ್ರಕರಣ ಎಸ್‌ಐಟಿಗೆ: ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್!

Jul 21, 2025 - 10:45
ಧರ್ಮಸ್ಥಳ ಸಾಕ್ಷಿ ದೂರು ಪ್ರಕರಣ ಎಸ್‌ಐಟಿಗೆ: ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್!

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ.

ಪೊಲೀಸ್ ಮಹಾನಿರ್ದೇಶಕ (ಆಂತರಿಕ ಭದ್ರತಾ ವಿಭಾಗ) ಪ್ರಣವ್ ಮೊಹಂತಿ ಇವರು ಎಸ್‌ಐಟಿ ತಂಡದ ನೇತೃತ್ವ ವಹಿಸಲಿದ್ದು, ಪೊಲೀಸ್ ಉಪ ಮಹಾನಿರೀಕ್ಷಕ (ನೇಮಕಾತಿ) ಎಂಎನ್ ಅನುಚೇತ್; ನಗರ ಸಶಸ್ತ್ರ ಮೀಸಲು (ಸಿಎಆರ್) ಪ್ರಧಾನ ಕಚೇರಿಯ ಪೊಲೀಸ್ ಉಪ ಆಯುಕ್ತ ಸೌಮ್ಯಲತಾ; ಮತ್ತು ಪೊಲೀಸ್ ವರಿಷ್ಠಾಧಿಕಾರಿ (ಆಂತರಿಕ ಭದ್ರತಾ ವಿಭಾಗ) ಜಿತೇಂದ್ರ ಕುಮಾರ್ ದಯಾಮ ಅವರು ಎಸ್‌ಐಟಿ ತಂಡದ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ

ಎಸ್‌ಐಟಿಗೆ ವಹಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಿಎಂ, ‘ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ. ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ’ ಎಂದು ಹೇಳಿದ್ದಾರೆ.

ಮುಂದುವರಿದು, ‘ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ’ ಎಂದು ಪೋಸ್ಟ್ ಮಾಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0