ಅಚ್ಛೇದಿನ ಎಲ್ಲೋಯ್ತು? ಖಾತೆಗೆ 15 ಲಕ್ಷ ಏನಾಯ್ತು ಎಂದು ಎಚ್‌ಡಿಕೆಯನ್ನು ಕೇಳಿ : ಡಿಸಿಎಂ ಡಿ.ಕೆ.ಶಿವಕುಮಾರ್

Jul 28, 2025 - 18:06
ಅಚ್ಛೇದಿನ ಎಲ್ಲೋಯ್ತು? ಖಾತೆಗೆ 15 ಲಕ್ಷ ಏನಾಯ್ತು ಎಂದು ಎಚ್‌ಡಿಕೆಯನ್ನು ಕೇಳಿ : ಡಿಸಿಎಂ ಡಿ.ಕೆ.ಶಿವಕುಮಾರ್

ಮದ್ದೂರಿನಲ್ಲಿ 1,146 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ

ಮದ್ದೂರು: "ನನಗೆ ಕನಕಪುರ ಎಷ್ಟು ಮುಖ್ಯವೋ, ಮಂಡ್ಯದ ಏಳು ಕ್ಷೇತ್ರಗಳು ಅಷ್ಟೇ ಮುಖ್ಯ. ಮದ್ದೂರಿನ ಶಾಸಕ ಉದಯ್ ಅವರ ಬೆನ್ನಿಗೆ ಇಡೀ ಸರ್ಕಾರ ನಿಂತಿದೆ. ಕ್ಷೇತ್ರದ ಜನರ ಋಣ ತೀರಿಸಲು 1,146 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮದ್ದೂರಿನಲ್ಲಿ ಸೋಮವಾರ ನಡೆದ ಮೊತ್ತದ ವಿವಿಧ ಇಲಾಖೆಗಳ ಹಲವು ಯೋಜನೆಗಳ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

“ನಾವು ಇಂದು ನಿಮ್ಮಿಂದ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ. ಈ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಉದಯ್ ಅವರನ್ನು ಗೆಲ್ಲಿಸಿ ಜಿಲ್ಲೆಯ 7 ಸ್ಥಾನಗಳ ಪೈಕಿ 6ರಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿದ್ದೀರಿ. ಆ ಮೂಲಕ ರಾಜ್ಯದಲ್ಲಿ 136 ಸಂಖ್ಯಾಬಲದ ಬಲಿಷ್ಠ ಸರ್ಕಾರ ರಚನೆಗೆ ಸಹಕಾರ ನೀಡಿರುವ ನಿಮ್ಮ ಋಣ ತೀರಿಸಲು ನಾವಿಲ್ಲಿಗೆ ಬಂದಿದ್ದೇವೆ” ಎಂದು ತಿಳಿಸಿದರು. 

ಕುಮಾರಸ್ವಾಮಿ ಅವರನ್ನು ಕೇಳಬೇಕು :

“ಉಳಿ ಪೆಟ್ಟು ಬೀಳದೇ ಕಲ್ಲು ಶಿಲೆಯಾಗುವುದಿಲ್ಲ, ನೇಗಿಲು ಉಳುಮೆ ಮಾಡದೇ ಹೊಲ ಮಟ್ಟವಾಗುವುದಿಲ್ಲ. ಅದೇ ರೀತಿ ಉದಯ್ ಅವರು ನಿಮ್ಮ ಬದುಕು ಹಸನಾಗಿಸಲು ಶ್ರಮಿಸುತ್ತಿದ್ದಾರೆ. ಮರಕ್ಕೆ ಬೇರು ಎಷ್ಟು ಮುಖ್ಯವೋ, ಅದೇ ರೀತಿ ಮನುಷ್ಯನಿಗೆ ನಂಬಿಕೆ ಮುಖ್ಯ. ನನಗೆ ಕನಕಪುರ ಕ್ಷೇತ್ರ ಎಷ್ಟು ಮುಖ್ಯವೋ, ಅದೇರೀತಿ ಮಂಡ್ಯ ಜಿಲ್ಲೆಯ ಪ್ರತಿಯೊಂದು ಕ್ಷೇತ್ರವೂ ಮುಖ್ಯ. ದೇವರು ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ಅಚ್ಛೇದಿನ ಬರುತ್ತದೆ ಎಂದಿದ್ದರು. ಅವರು ಹೇಳಿದ್ದ ಅಚ್ಛೇದಿನ, ಖಾತೆಗೆ 15 ಲಕ್ಷದ ವಿಚಾರ ಏನಾಯ್ತು ಎಂದು ನೀವೆಲ್ಲರೂ ಬಿಜೆಪಿ ಹಾಗೂ ಕುಮಾರಸ್ವಾಮಿ ಅವರನ್ನು ಕೇಳಬೇಕು” ಎಂದರು.

ಜೆಡಿಎಸ್ ನಾಯಕರು ಸುಮ್ಮನೆ ಸಮಯ ವ್ಯರ್ಥ ಮಾಡಿಕೊಳ್ಳಬೇಡಿ :

“ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ. ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ ಇನ್ನು ಹಲವು ಕಾರ್ಯಕ್ರಮ ರೂಪಿಸುತ್ತಿದ್ದೇವೆ. ನಮ್ಮ ಸಚಿವರುಗಳು ತಮ್ಮ ತಮ್ಮ ಇಲಾಖೆಗಳ ಜವಾಬ್ದಾರಿ ವಹಿಸಿಕೊಂಡ ಬಳಿಕ ಬಡವರ ಬದುಕಿನಲ್ಲಿ ಸುಧಾರಣೆ ತರಲು ಕಾರ್ಯಕ್ರಮ ರೂಪಿಸಿದ್ದಾರೆ. ಎಂಎಲ್‌ಸಿಗಳಾದ ದಿನೇಶ್ ಗೂಳಿಗೌಡ, ಮಧುಮಾದೇಗೌಡ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯ ಜೆಡಿಎಸ್ ನಾಯಕರಿಗೆ ಒಂದು ಮಾತು ಹೇಳಲು ಬಯಸುತ್ತೇನೆ. ನೀವು ನಿಮ್ಮ ಸಮಯ ವ್ಯರ್ಥ ಮಾಡಿಕೊಳ್ಳಬೇಡಿ. ಈಗೇನಿದ್ದರೂ ಕಾಂಗ್ರೆಸ್ ಕಾಲ. ಶಿವಪುರ ಸೌಧದಲ್ಲಿ ಹೇಗೆ ರಾಷ್ಟ್ರಧ್ವಜ ಹಾರುತ್ತಿದೆಯೋ ಅದೇ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧ್ವಜ ನಿರಂತರವಾಗಿ ಹಾರಾಡಲಿದೆ. ನೀವು ನಿಮ್ಮ ಬದುಕನ್ನು ಗಮನದಲ್ಲಿಟ್ಟುಕೊಂಡು ಆಲೋಚಿಸಿ” ಎಂದು ಹೇಳಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0