ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು

Aug 1, 2025 - 18:16
ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು

ಬೆಂಗಳೂರು: ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ.

ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇದೀಗ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ.

ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಏನು? ಎಷ್ಟು? ಎಂಬುದನ್ನು ನ್ಯಾಯಾಲಯ ಇನ್ನಷ್ಟೇ ಪ್ರಕಟಿಸಬೇಕಿದೆ. ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಪಡುವ ಸಾಧ್ಯತೆ ಇದೆ. ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಮಾನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ.

ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ಹಗರಣದ ಪೆನ್ ಡ್ರೈವ್‌ಗಳು ಭಾರಿ ಸದ್ದು ಮಾಡಿದ್ದವು.

ಈ ಸಂಬಂಧ ಮೈಸೂರಿನ ಕೆ.ಆರ್‌.ನಗರದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಸೈಬರ್‌ ಅಪರಾಧ ಠಾಣೆಯಲ್ಲಿ ಪ್ರಜ್ವಲ್‌ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್‌ಗಳಾದ 376(2)(ಎನ್‌), 376(2)(ಕೆ), 506, 354(ಎ), 354(ಬಿ), 354(ಸಿ) ಹಾಗೂ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ ಸೆಕ್ಷನ್‌ 66ಇ ಅಡಿ ಪ್ರಕರಣ ದಾಖಲಿಸಲಾಗಿತ್ತು.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0